ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗ ಸೃಜಿಸುವ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ [MGNREGS] ಯನ್ನು ಜಾರಿಗೊಳಿಸುವುದು ಮತ್ತು ಉಸ್ತುವಾರಿ ಗ್ರಾಮೀಣಾಭಿವೃದ್ದಿ ಆಯುಕ್ತಾಲಯದ ಜವಾಬ್ದಾರಿಯಾಗಿದೆ.ಕೂಲಿ ಉದ್ಯೋಗದ ಕಾಮಗಾರಿಗಳ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ಬಡತನ ನಿರ್ಮೂಲನೆಗಾಗಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಅಕುಶಲ ದೈಹಿಕ ಕೆಲಸ ಮಾಡಲು ಇಚ್ಛಿಸುವ ಗ್ರಾಮೀಣ ಪ್ರದೇಶದ ವಯಸ್ಕರಿಗೆ ಒಂದು ಆರ್ಥಿಕ ವರ್ಷದಲ್ಲಿ ಕನಿಷ್ಠ ನೂರು ದಿನಗಳ ಉದ್ಯೋಗಾವಕಾಶಗಳನ್ನು ಸ್ಥಳೀಯವಾಗಿ ನೀಡಿ, ಬಡಜನರ ಬದುಕನ್ನು ಹಸನಾಗಿಸುವುದು ಯೋಜನೆಯ ಮುಖ್ಯ ಉದ್ದೇಶವಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಬಡಜನರನ್ನು ತೊಡಗಿಸಿಕೊಂಡು ಕೃಷಿ ಕಾರ್ಮಿಕರಿಗೆ ಕೂಲಿ ನೀಡುವ ಉದ್ಯೋಗ, ಆಹಾರಭದ್ರತೆ, ದೀರ್ಘಕಾಲ ಬಾಳಿಕೆ ಬರುವಂತಹ ಸ್ವತ್ತುಗಳ ನಿರ್ಮಾಣ ಮುಂತಾದ ಕಾರ್ಯಕ್ರಮಗಳನ್ನು ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ [MGNREGS] ಕೈಗೊಳ್ಳಲಾಗುತ್ತಿದೆ.